ಚರಂಡಿಯ ನೀರು ರೋಡಿಗೆ ! ಗ್ರಾಮ ಪಂಚಾಯತ್ ನಿರ್ಲಕ್ಷಕ್ಕೆ ಸಾರ್ವಜನಿಕರ ಆಕ್ರೋಶ 
ಹನಗಂಡಿ:
ಹನಗಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಯ ಮೇಲೆ ಕೊಳಚೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆ ಮಧ್ಯಭಾಗದಲ್ಲಿ ಕೊಳಚೆ ನೀರು ಸಂಗ್ರಹಗೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಪರದಾಡುವಂತಾಗಿದೆ.
ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆ ಹಾಗೂ ಪಂಚಾಯತ್ ಆಡಳಿತದ ನಿರ್ಲಕ್ಷದಿಂದ ಈ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೊಳಚೆ ನೀರು ದೀರ್ಘಕಾಲ ನಿಂತಿರುವುದರಿಂದ ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ದೂರಿದ್ದಾರೆ. ತಕ್ಷಣವೇ ರಸ್ತೆ ಮೇಲಿನ ಕೊಳಚೆ ನೀರನ್ನು ತೆರವುಗೊಳಿಸಿ, ಶಾಶ್ವತ ಚರಂಡಿ ವ್ಯವಸ್ಥೆ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸರ್ವಜನಿಕರು ಒತ್ತಾಯಿಸಿದ್ದಾರೆ.

