ಹನಗಂಡಿಯಲ್ಲಿ ಬಸ್ ಸಮಸ್ಯೆ: ರಸ್ತೆ ತಡೆದು ವಿದ್ಯಾರ್ಥಿಗಳು
ಪ್ರತಿಭಟನೆ
ಸ್ಥಳಕ್ಕೆ ಧಾವಿಸಿದ ಜಮಖಂಡಿ ಡಿಪೋ ವ್ಯವಸ್ಥಾಪಕರು ಹಾಗೂ ತೆರದಾಳ ಪೊಲೀಸರು :
ಹನಗಂಡಿ, (ವರದಿ):
ಸಮಯಕ್ಕೆ ಸರಿಯಾಗಿ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಹನಗಂಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸುಮಾರು 120ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಬೆಳಿಗ್ಗೆ ಹನಗಂಡಿಯಲ್ಲಿ ನಡೆದಿದೆ.
ಪ್ರತಿದಿನ ಮುಂಜಾನೆ 7.30 ಗಂಟೆಗೆ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ಗಳು ನಿಗದಿತ ಸಮಯಕ್ಕೆ ಬಾರದ ಕಾರಣ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರಮುಖ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಸಂಪರ್ಣ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಪ್ರತಿಭಟನೆಯ ವಿಷಯ ತಿಳಿಯುತ್ತಿದ್ದಂತೆ ಜಮಖಂಡಿ ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕರು ಹಾಗೂ ತೆರದಾಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ವಿದ್ಯರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಅಧಿಕಾರಿಗಳು, ಬಸ್ ಸಂಚಾರವನ್ನು ನಿಯಮಿತಗೊಳಿಸಿ, ಕಾಲೇಜು ವೇಳೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ತೇರದಾಳ ತಹಸಿಲ್ದಾರ್ ರವರು ಮನವಿಯನ್ನು ಸ್ವೀಕರಿಸಿ, ತಹಶೀಲ್ದಾರ್ ಹಾಗೂ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಭರವಸೆಯ ಬಳಿಕ ವಿದ್ಯಾರ್ಥಿಗಳು ರಸ್ತೆ ತಡೆ ಪ್ರತಿಭಟನೆಯನ್ನು ಹಿಂಪಡೆದರು. ನಂತರ ಕೆಲಕಾಲ ಸ್ಥಗಿತಗೊಂಡಿದ್ದ ವಾಹನ ಸಂಚಾರವನ್ನು ಪೊಲೀಸರು ಸುಗಮಗೊಳಿಸಿದರು.
ವಿದ್ಯಾರ್ಥಿಗಳು ಮಾತನಾಡಿ, “ಪ್ರತಿದಿನ ಬಸ್ ವಿಳಂಬದಿಂದ ಕಾಲೇಜಿಗೆ ತಡವಾಗಿ ತಲುಪಬೇಕಾಗುತ್ತಿದೆ. ಹಾಜರಾತಿ ಹಾಗೂ ವಿದ್ಯಾಭ್ಯಾಸದ ಮೇಲೆ ಇದರಿಂದ ದುಷ್ಪರಿಣಾಮ ಉಂಟಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಗ್ರಾಮಸ್ಥರು, ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.

