ತೇರದಾಳ್ ಪುರಸಭೆಯ ಆಸ್ತಿಪಾಸ್ತಿಗೆ ಮಧ್ಯರಾತ್ರಿ ಕಿಡಿಗೇಡಿಗಳಿಂದ ಹಾನಿ

ತೇರದಾಳ್ : ಜುಲೈ ೯: ಪಟ್ಟಣದ ಪುರಸಭೆಗೆ ಸೇರಿದ ಅಂಗಡಿಗಳು ಕಿಡಿಗೇಡಿಗಳು ಗುರುವಾರ ಮಧ್ಯರಾತ್ರಿ ಜೆಸಿಬಿಯನ್ನು ಬಳಸಿ ನಡೆಸಿ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿರುವ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ.
ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ವಾಣಿಜ್ಯ ಬಳಕೆಯ ಅಂಗಡಿಗಳ ಬಾಗಿಲುಗಳು, ಶಟರ್ಗಳು ಹಾಗೂ ಇತರೆ ಸಾಮಗ್ರಿಗಳನ್ನು ಕಿಡಿಗೇಡಿಗಳು ಹಾನಿಗೊಳಿಸಿರುವುದಾಗಿ ತಿಳಿದುಬಂದಿದೆ.
ತಪ್ಪಿತಸ್ಥರನ್ನು ಕೂಡಲೇ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಹಾಗೂ ಪುರಸಭೆ ಮಾಜಿ ಸದಸ್ಯ ರಾಜೇಸಾಬ್ ನಗಾರ್ಚಿ ಪುರಸಭೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಯ ಪ್ರಮಾಣದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯವು ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಪಟ್ಟಣದಲ್ಲಿ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು ಹಾಗೂ ಪುರಸಭೆಯ ಆಸ್ತಿಪಾಸ್ತಿಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

