ಹನಗಂಡಿ : ವಿದ್ಯಾರ್ಥಿಗಳ ನಿರಂತರ ಬೇಡಿಕೆ ಹಾಗೂ ಗ್ರಾಮಸ್ಥರ ಹೋರಾಟಕ್ಕೆ ಸ್ಪಂದಿಸಿದ ಕೆಎಸ್ಆರ್ಟಿಸಿ ಅಧಿಕಾರಿಗಳು ಹನಗಂಡಿ–ಜಮಖಂಡಿ ಬಸ್ ಸೇವೆಯನ್ನು ಆರಂಭಿಸಿದ್ದು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು. ಬಸ್ ಸೇವೆಗೆ ತೆಂಗಿನಕಾಯಿ ಒಡೆದು ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಅಲ್ಲಾಭಕ್ಷ್ ಅಲಾಸ್ ಅವರು, “ಹನಗಂಡಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ವಿದ್ಯಾರ್ಥಿಗಳು ಪ್ರತಿದಿನ ಶಿಕ್ಷಣಕ್ಕಾಗಿ ಜಮಖಂಡಿ ಸೇರಿದಂತೆ ವಿವಿಧ ಕಾಲೇಜುಗಳಿಗೆ ತೆರಳಬೇಕಾಗುತ್ತದೆ. ಸಮರ್ಪಕ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ನ್ಯಾಯಸಮ್ಮತವಾಗಿತ್ತು. ಅವರ ಸಮಸ್ಯೆಗೆ ಸ್ಪಂದಿಸಿ ತಕ್ಷಣ ಕ್ರಮ ಕೈಗೊಂಡ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಹಾಗೂ ಇಲಾಖೆಯ ಸಿಬ್ಬಂದಿಗೆ ಗ್ರಾಮದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಹೇಳಿದರು.
ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಾ, “ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಗ್ರಾಮದ ಹೆಸರನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಬೇಕು” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ವಿದ್ಯಾರ್ಥಿಗಳು, ಪಾಲಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

